
ಹಸಿ ಶುಂಠಿ ಖರೀದಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜುಲೈ 2 ರಿಂದ 30 ವರೆಗೆ ಖರೀದಿ ಕೇಂದ್ರ ತೆರೆಯಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು 2024-25 ನೇ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಹಸಿ ಶುಂಠಿ ಖರೀದಿಗೆ ಖರೀದಿ ಕೇಂದ್ರ ತೆರೆಯಲು ನಡೆದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರೈತ ಸಂಪರ್ಕ ಕೇಂದ್ರಗಳ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಮಾರ್ಗಸೂಚಿನ್ವಯ ಪ್ರತಿ ಕ್ವಿಂಟಾಲ್ ಗೆ ರೂ 2445 ಒಬ್ಬ ರೈತರಿಂದ 60 ಕ್ವಿಂಟಾಲ್ ಖರೀದಿಗೆ ಮಾತ್ರ ಅವಕಾಶವಿದೆ ಎಂದು ತಿಳಿಸಿದರು. ಹೆಚ್ಚಿನ ರೈತರು ನೊಂದಣಿ ಮಾಡಿಕೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಖರೀದಿ ಕೇಂದ್ರದಲ್ಲಿ ತೋಟಗಾರಿಕೆ ಇಲಾಖೆಯ ಗ್ರೇಡರ್‌ಗಳು ಹಸಿ ಶುಂಠಿಯ ಗುಣಮಟ್ಟವನ್ನು ದೃಡೀಕರಣ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯ ಉಪ ನಿರ್ದೇಶಕರಾದ ಶ್ರೀ ಹರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಅರುಣ್ ಕುಮಾರ್ ಸಗ್ಗಾವಿ, ಸಹಕಾರ ಇಲಾಖೆ ಉಪ ನಿರ್ದೇಶಕರು ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.