
ಹಾಸನ, ಜುಲೈ 06: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಿತ್ತು. ಈ ಸಮಿತಿ ಶನಿವಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಈ ಮಧ್ಯ ಭಾನುವಾರ ಜಿಲ್ಲೆಯ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ (K. N. Rajanna), ಹೈಸ್ಕೂಲ್ ಮಕ್ಕಳಿಗೆ 15 ದಿನದೊಳಗೆ ತಪಾಸಣೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಿಷ್ಟು
ಜಿಲ್ಲೆಯ ಚನ್ನರಾಯಪಟ್ಟಣ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ, ಮಕ್ಕಳಿಂದ ಹಿಡಿದು ಪ್ರತಿಯೊಬ್ಬರು ಪ್ರತಿ ವರ್ಷ ಕಡ್ಡಾಯವಾಗಿ ಹೃದಯ ತಪಾಸಣೆ ಮಾಡಿಸಲು ಸರ್ಕಾರದಲ್ಲಿ ಚಿಂತನೆ ನಡೆದಿದೆ. ಚಿಕ್ಕ ಚಿಕ್ಕ ವಯಸ್ಸಿನವರು ಅಸುನೀಗಿದ್ದಾರೆ. ಅದು ಬೇಸರದ ಸಂಗತಿ. ಮುಂದೆ ಸಾವುಗಳು ಆಗಬಾರದು, ಅದನ್ನು ತಡೆಯಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ನಾನು ಬರುವಾಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಬಂದಿದ್ದೇನೆ. ಅವರು ಸಹ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಶೀಘ್ರದಲ್ಲೇ ಸಭೆ ನಡೆಸುತ್ತೇವೆ. ಅಲ್ಲಿ ತಜ್ಞರ ಸಮಿತಿ ನೀಡುವ ಸಲಹೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ವರದಿ : ಯೊಗೇಶ್ ಹಾಸನ